* ಏಕಗವಾಕ್ಷಿ ಯೋಜನೆಯಡಿ ಹಸಿರು ನಿಶಾನೆ ನೀಡಲಾಗಿರುವ ಕೈಗಾರಿಕಾ ಯೋಜನೆಗಳಿಗೆ ಗರಿಷ್ಠ 100 ದಿನಗಳೊಳಗೆ ಅಗತ್ಯವಿರುವ ಎಲ್ಲಾ ಅನುಮೋದನೆಗಳನ್ನು ನೀಡಲು ಮೈಕ್ರೋಸಾಫ್ಟ್ ಕಂಪನಿಯ ನೆರವಿನಿಂದ ಸಾಫ್ಟ್‌ವೇರ್‌ ಅಭಿವೃದ್ಧಿಪಡಿಸಲಾಗಿದೆ.* ಈ ಅಭಿವೃದ್ಧಿಪಡಿಸಲಾದ ಸಾಫ್ಟ್‌ವೇರ್‌ ಅನ್ನು ಫೆಬ್ರವರಿ ತಿಂಗಳಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್‌ ತಿಳಿಸಿದ್ದಾರೆ.* ಏಕಗವಾಕ್ಷಿ ಯೋಜನೆ ಜಾರಿ ಸಂಬಂಧ ಮೈಕ್ರೋಸಾಫ್ಟ್ ಸಂಸ್ಥೆ ಪ್ರತಿನಿಧಿಗಳು ನೀಡಿದ ಪ್ರಾತ್ಯಕ್ಷಿಕೆಯನ್ನು ವೀಕ್ಷಿಸಿದ ನಂತರ ಮಾತನಾಡಿದ ಎಂ ಬಿ ಪಾಟೀಲರು "ಕೆಲವು ರಾಜ್ಯಗಳಲ್ಲಿ ಕೈಗಾರಿಕಾ ಹೂಡಿಕೆ ಯೋಜನೆಗಳಿಗೆ 60-70 ದಿನಗಳಲ್ಲಿ ಪ್ರತಿಯೊಂದು ಅನುಮೋದನೆಯನ್ನೂ ನೀಡಲಾಗುತ್ತಿದೆ. ಆದರೆ ನಮ್ಮ ರಾಜ್ಯದಲ್ಲಿ ಸರಾಸರಿ 300 ದಿನಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಇದನ್ನು 60-70 ದಿನಗಳಿಗೆ ಇಳಿಸಬೇಕೆಂಬುದು ತಮ್ಮ‌ ಗುರಿಯಾಗಿದೆ.* 60-70 ದಿನಗಳಿಗೆ ಇಳಿಸದೆ  ಹೋದರೆ ನಾವು ಹೂಡಿಕೆಯನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ. ಇದಕ್ಕಾಗಿ ತಂತ್ರಜ್ಞಾನದ ನೆರವು ನೀಡುವಂತೆ ಮೈಕ್ರೋಸಾಫ್ಟ್ ಕಂಪನಿಗೆ ಜವಾಬ್ದಾರಿ ವಹಿಸಲಾಗಿತ್ತು" ಎಂದು ಹೇಳಿದ್ದಾರೆ.* "ಕೈಗಾರಿಕಾ ಯೋಜನೆಗಳಿಗೆ ರಾಜ್ಯದಲ್ಲಿ ಅಗ್ನಿಶಾಮಕ, ಕಾನೂನು, ಅರಣ್ಯ ಮುಂತಾದ 33 ಇಲಾಖೆಗಳ ಅನುಮೋದನೆ ಬೇಕಾಗುತ್ತದೆ. ಜೊತೆಗೆ 147 ಬಗೆಯ ಸೇವೆಗಳಿವೆ. ಇವನ್ನು ಒಂದೇ ಕಡೆ ತರಬೇಕಾಗಿದೆ.* ಈ ಸಾಫ್ಟ್‌ವೇರ್ ಇದನ್ನು ಸುಗಮಗೊಳಿಸಲಿದೆ. ಏಕಗವಾಕ್ಷಿ ವ್ಯವಸ್ಥೆಯ ಬಗ್ಗೆ ಸಂಪುಟದ ಎಲ್ಲ ಸಹೋದ್ಯೋಗಿಗಳಿಗೆ ಹಾಗೂ ಎಲ್ಲ ಇಲಾಖೆಗಳ ಮುಖ್ಯಸ್ಥರಿಗೆ ಪರಿಚಯಿಸಲಾಗುವುದು. ಈ ಮೂಲಕ ಕೈಗಾರಿಕಾ ಇಲಾಖೆ ಸೇರಿದಂತೆ ಎಲ್ಲ ಇಲಾಖೆಗಳೂ ತಮ್ಮ ವ್ಯಾಪ್ತಿಯ ಕೆಲಸವನ್ನು ಆದಷ್ಟು ಬೇಗ ಪೂರ್ಣಗೊಳಿಸುವಂತೆ ಕೋರಲಾಗುವುದು" ಎಂದು ತಿಳಿಸಿದರು.