➤ ಬಸವ ವೇದಿಕೆಯು 2026ನೇ ಸಾಲಿನ ಪ್ರತಿಷ್ಠಿತ ಪ್ರಶಸ್ತಿಗಳನ್ನು ಘೋಷಣೆ ಮಾಡಿದೆ. ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠರಾದ ಎಚ್.ಡಿ. ದೇವೇಗೌಡ ಅವರಿಗೆ ಈ ಸಾಲಿನ 'ಬಸವಶ್ರೀ' ಪ್ರಶಸ್ತಿ ಒಲಿದಿದ್ದರೆ, ಖ್ಯಾತ ಶಿಕ್ಷಣ ತಜ್ಞ ಡಾ. ಗುರುರಾಜ ಕರಜಗಿ ಅವರನ್ನು 'ವಚನ ಸಾಹಿತ್ಯಶ್ರೀ' ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಗುರುವಾರ (23-04-2026) ನಡೆದ ಸುದ್ದಿಗೋಷ್ಠಿಯಲ್ಲಿ ಬಸವ ವೇದಿಕೆಯ ಅಧ್ಯಕ್ಷರಾದ ಸಿ. ಸೋಮಶೇಖರ್ ಅವರು ಈ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಪ್ರಕಟಿಸಿದರು.➤ ಪ್ರಶಸ್ತಿಯ ಸ್ವರೂಪ:- ಬಸವಶ್ರೀ ಪ್ರಶಸ್ತಿ: ಬಸವಣ್ಣನವರ ಪುತ್ಥಳಿ ಮತ್ತು ಸ್ಮರಣಿಕೆಯನ್ನು ಒಳಗೊಂಡಿರುತ್ತದೆ.- ವಚನ ಸಾಹಿತ್ಯಶ್ರೀ ಪ್ರಶಸ್ತಿ: ₹10,000 ನಗದು ಬಹುಮಾನ ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ.➤ ಪ್ರಶಸ್ತಿ ಪ್ರದಾನ ಸಮಾರಂಭದ ವಿವರ: ಬಸವ ಜಯಂತಿ ಪ್ರಯುಕ್ತ ಏಪ್ರಿಲ್ 27, 2026 ರಂದು ಸಂಜೆ 5.30ಕ್ಕೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ವಿಶೇಷ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಆಯೋಜಿಸಲಾಗಿದೆ.➤ ಈ ಸಮಾರಂಭವು ಸುತ್ತೂರು ಮಠದ ಪೀಠಾಧ್ಯಕ್ಷರಾದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳ ದಿವ್ಯ ಸಾನ್ನಿಧ್ಯದಲ್ಲಿ ನಡೆಯಲಿದೆ. ಕೇಂದ್ರ ಸಚಿವ ವಿ. ಸೋಮಣ್ಣ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.ಪ್ರಶಸ್ತಿ ಪ್ರದಾನವನ್ನು ಸಂಸದ ಬಸವರಾಜ ಬೊಮ್ಮಾಯಿ ಹಾಗೂ ಕಾನೂನು ಸಚಿವ ಎಚ್.ಕೆ. ಪಾಟೀಲ ಅವರು ನೆರವೇರಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ ಅವರು 'ಬಸವಜ್ಯೋತಿ' ವಿಶೇಷ ಸಂಚಿಕೆಯನ್ನು ಬಿಡುಗಡೆ ಮಾಡಲಿದ್ದಾರೆ.