* ರಾಷ್ಟ್ರಧ್ವಜ ತಯಾರಿಸುವ ಬಟ್ಟೆ ಉತ್ಪಾದನೆಯಲ್ಲಿ ತೊಡಗಿಸಿಕೊಂಡಿರುವ ದೇಶದ ಮೊದಲ ಖಾದಿ ಗ್ರಾಮೋದ್ಯೋಗ ಸಂಸ್ಥೆ ಎಂಬ ಹಿರಿಮೆ ಹೊಂದಿರುವ ಧಾರವಾಡ ಜಿಲ್ಲೆಯ ಗರಗ ಕ್ಷೇತ್ರೀಯ ಸೇವಾ ಸಂಘವನ್ನು 2023ನೇ ಸಾಲಿನ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.* ಈ ಪ್ರಶಸ್ತಿಯು ₹ 5 ಲಕ್ಷ ನಗದು ಪುರಸ್ಕಾರ ಒಳಗೊಂಡಿದ್ದು, ಕರ್ನಾಟಕ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಬಿ. ವೀರಪ್ಪ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಆಯ್ಕೆ ಸಮಿತಿಯ ತೀರ್ಮಾನವನ್ನು ಅಂಗೀಕರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. * ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಜನ್ಮದಿನ ಅಕ್ಟೋಬರ್ 2ರಂದು ಸಂಜೆ 4.30 ಕ್ಕೆ ನಗರದ ಭಗವಾನ್ ಮಹಾವೀರ (ಇನ್‌ಫೆಂಟ್ರಿ) ರಸ್ತೆಯ ವಾರ್ತಾ ಸೌಧದ ಸುಲೋಚನ ಸಭಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗರಗ ಕ್ಷೇತ್ರೀಯ ಸೇವಾ ಸಂಘಕ್ಕೆ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ.* ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ರಿಜ್ವಾನ್ ಅರ್ಷದ್ ಸಮಾರಂಭದ ಅಧ್ಯಕ್ಷತೆ ವಹಿಸುವರು.  ಮುಖ್ಯಮಂತ್ರಿಯವರ ಕಾರ್ಯದರ್ಶಿ ಎನ್.ಜಯರಾಮ್ ,ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾದ ಹೇಮಂತ್ ಎಂ.ನಿಂಬಾಳ್ಕರ್ ಅವರು ಸೇರಿದಂತೆ ಹಲವು ಗಣ್ಯರು ಈ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.