* ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಕತೆಗಾರ ಪ್ರೊ.ಮೊಗಳ್ಳಿ ಗಣೇಶ್ (64) ಭಾನುವಾರ (ಅ.05) ಬೆಳಿಗ್ಗೆ ವಿಜಯನಗರ ಜಿಲ್ಲೆಯ ಹೊಸಪೇಟೆಯ ತಮ್ಮ ಮನೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ ಪತ್ನಿ, ಮೂವರು ಪುತ್ರಿಯರು ಇದ್ದಾರೆ.* ಮೊಗಳ್ಳಿ ಗಣೇಶ್ 1963ರ ಜುಲೈ 1ರಂದು ಚನ್ನಪಟ್ಟಣ ತಾಲ್ಲೂಕಿನ ಸಂತೆಮೊಗೇನ ಹಳ್ಳಿಯಲ್ಲಿ ಜನಿಸಿದರು. ಅವರು ಓದಿದ್ದು ಅರ್ಥಶಾಸ್ತ್ರ ಮತ್ತು ಜಾನಪದ. ಆದರೆ, ಅವರಲ್ಲಿ ಹರಿಯುತ್ತಿದ್ದುದು ಮಣ್ಣಿನ ವಾಸನೆಯುಕ್ತ ಸಾಹಿತ್ಯಪ್ರೀತಿ. ಅವರ ‘ಬುಗುರಿ’, ‘ನನ್ನಜ್ಜನಿಗೊಂದಾಸೆಯಿತ್ತು’, ‘ಒಂದು ಹಳೆಯ ಚಡ್ಡಿ’ ಇತ್ಯಾದಿ ಕಥೆಗಳು ಕನ್ನಡದ ಅತ್ಯುತ್ತಮ ಸಣ್ಣ ಕಥೆಗಳಾಗಿ ಗುರುತಿಸಲ್ಪಟ್ಟಿವೆ.* ಪ್ರೊ.ಮೊಗಳ್ಳಿ ಗಣೇಶ್ ಅವರು ವಿಶ್ವವಿದ್ಯಾಲಯದಲ್ಲಿ ಜಾನಪದ ಅಧ್ಯಯನ ವಿಭಾಗದ ಮುಖ್ಯಸ್ಥರಾಗಿದ್ದರು, ಸದ್ಯ ಹಾವೇರಿಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯರಾಗಿದ್ದರು. ಮೊಗಳ್ಳಿ ಗಣೇಶ್ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ವರನಟ ಡಾ.ರಾಜಕುಮಾರ್ ಹೆಸರಿನಲ್ಲಿರುವ ಅಧ್ಯಯನ ಪೀಠಕ್ಕೆ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದಾರೆ. * ಕನ್ನಡದ ಖ್ಯಾತ ಕಥೆಗಾರ, ವಿಮರ್ಶಕ ಡಾ. ಮೊಗಳ್ಳಿ ಗಣೇಶ್ ಅವರ ನಿಧನಕ್ಕೆ ಕೇಂದ್ರ ಸಚಿವ ಕುಮಾರ ಸ್ವಾಮಿ, ಸಚಿವ ಎಚ್ಸಿ ಮಹದೇವಪ್ಪ, ಹಿಂದುಳಿದ ವರ್ಗಗಳ ಕಲ್ಯಾಣ ,ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ, ತೀವ್ರ ಸಂತಾಪ ಸೂಚಿಸಿದ್ದಾರೆ. ಅವರ ನಿಧನ ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ.* ಮೊಗಳ್ಳಿ ಗಣೇಶರ ಕೃತಿಗಳು : ಬುಗುರಿ, ಮಣ್ಣು, ಅತ್ತೆ, ಭೂಮಿ, ಕನ್ನೆಮಳೆ, ದೇವರ ದಾರಿ, ಮೊಗಳ್ಳಿ ಕಥೆಗಳು (ಆವರೆಗಿನ ಬಹುಪಾಲು ಕಥೆಗಳ ಸಂಕಲನ) ಮುಂತಾದವು ಮೊಗಳ್ಳಿ ಗಣೇಶ್ ಅವರ ಕಥಾ ಸಂಕಲನಗಳು. ತೊಟ್ಟಿಲು, ಕಿರೀಟ ಅವರ ಕಾದಂಬರಿಗಳು. ‘ಬೇರು’ ಅವರ ಬೃಹತ್ ಕಾದಂಬರಿ. ‘ಕಥನ’ ಅವರ ಪ್ರಬಂಧ ಸಂಕಲನ. ‘ಸೊಲ್ಲು’, ‘ವಿಮರ್ಶೆ’, ‘ಶಂಬಾ ಭಾಷಿಕ ಸಂಶೋಧನೆ’, ‘ತಕರಾರು’ ಅವರ ವಿಮರ್ಶಾ ಕೃತಿಗಳು. ‘ವಿಶ್ಲೇಷಣೆ’ ಎಂಬ ಅಂಕಣ ಕೂಡಾ ಜನಪ್ರಿಯ. ‘ ಅಂಬೇಡ್ಕರ್ ಎಂಬ ಮಹಾನದಿ ಮತ್ತು ದಲಿತೀಕರಣಗೊಂಡ ಗಾಂಧೀಜಿ ’ ಅವರ ಚಿಂತನ ಕೃತಿ. ಗಣೇಶ್ ಇತರ ಭಾಷೆಗಳ ಕೃತಿಗಳನ್ನು ಕನ್ನಡಕ್ಕೆ ತಂದರೆ, ಅವರ ಅನೇಕ ಬರಹಗಳು ಇತರ ಭಾಷೆಗಳಿಗೆ ಅನುವಾದಗೊಂಡಿದೆ.