* ಕರ್ನಾಟಕ ಸುವರ್ಣ ಮಹೋತ್ಸವದ ಅಂಗವಾಗಿ ವಿಧಾನಸೌಧದ ಪಶ್ಚಿಮದ್ವಾರದಲ್ಲಿ ನಿರ್ಮಿಸಿರುವ 25 ಅಡಿ ಎತ್ತರದ ಭುವನೇಶ್ವರಿ ಕಂಚಿನ ಪ್ರತಿಮೆಯನ್ನು ಜನವರಿ 27ರಂದು ಅನಾವರಣಗೊಳಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ.* ಶುಕ್ರವಾರ(ಜನವರಿ 24) ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಜ.27ರಂದು ಸಂಜೆ 4.30ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದು, ಪ್ರತಿ ದಿನವೂ ಭುವನೇಶ್ವರಿಗೆ ಅರ್ಚನೆ ನಡೆಯಲಿದೆ ಎಂದರು.* ನಾಡದೇವಿ ಪ್ರತಿಮೆಯ ಹಿಂದೆ ಕರ್ನಾಟಕ ನಕ್ಷೆ ಹಾಗೂ ಉಬ್ಬು ಶಿಲ್ಪ ಇರಲಿದೆ. ಮುಂಭಾಗದಲ್ಲಿ ಭೌಗೋಳಿಕ ನಕ್ಷೆ, ಹಿಂಬದಿಯಲ್ಲಿ ನಾಡಗೀತೆಯನ್ನು ಕೆತ್ತಲಾಗಿದೆ.* ಪ್ರಸಿದ್ಧ ಶಿಲ್ಪಕಲಾ ಶೈಲಿಗಳಾದ ಹೊಯ್ಸಳ, ಚಾಲುಕ್ಯ, ಕದಂಬ ಹಾಗೂ ಆಧುನಿಕ ನೈಜ ಶಿಲ್ಪಗಳ ಶೈಲಿಗಳನ್ನು ಅಳವಡಿಸಿ ಪ್ರತಿಮೆಯನ್ನು ನಿರ್ಮಿಸಲಾಗಿದೆ.* ಇದರಲ್ಲಿ ಹೊಯ್ಸಳ ಲಾಂಛನ, ವೈಜಯಜಯಂತಿ ಮಾಲೆ, ಕಂಠಿಹಾರ, ಗಂಡ ಭೇರುಂಡ ಇರಲಿದೆ ಎಂದು ಶಿವರಾಜ್ ತಂಗಡಗಿ ವಿವರಿಸಿದರು.* ಜ್ಞಾನಪೀಠ ಪುರಸ್ಕೃತರು ಹಾಗೂ ನಾಡಿನ ಹೆಸರಾಂತ ಮಹನೀಯರ ಫೋಟೋಗಳನ್ನು ಇಡಲಾದ ಪಲ್ಲಕ್ಕಿ ಮೆರವಣಿಗೆಯಲ್ಲಿ ಸಾಗಲಿದೆ.