* ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ತಮ್ಮ ವಿರುದ್ಧದ ನೀಡಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಕ್ರಮವನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಲಿದ್ದಾರೆ.* ಮುಖ್ಯಮಂತ್ರಿ ಪರವಾಗಿ ಹಿರಿಯ ವಕೀಲ ಕಪಿಲ್ ಸಿಬಲ್ ವಕಾಲತ್ತು ವಹಿಸಲಿದ್ದಾರೆ. ತನಿಖೆಗೆ ನೀಡಿರುವ ಅನುಮತಿಯನ್ನು ವಜಾಗೊಳಿಸುವಂತೆ ರಾಜ್ಯ ಕಾಂಗ್ರೆಸ್ ಪಕ್ಷದ ವತಿಯಿಂದಲೂ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಲಾಗುವುದು. ರಾಜ್ಯ ಕಾಂಗ್ರೆಸ್ ಪಕ್ಷದ ಪರವಾಗಿ ಎಐಸಿಸಿ ಕಾನೂನು ಘಟಕದ ಅಧ್ಯಕ್ಷ ಅಭಿಷೇಕ್ ಮನು ಸಿಂಫ್ಟಿ ವಕಾಲತ್ತು ವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.* ರಾಜ್ಯಪಾಲರ ನಿರ್ಧಾರ ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲು ಕೂಡ ಸಿಎಂ ಸಿದ್ದರಾಮಯ್ಯ ಚಿಂತನೆ ನಡೆಸಿ, ಆ ಮೂಲಕ ರಾಷ್ಟ್ರಮಟ್ಟದಲ್ಲೂ ರಾಜ್ಯಪಾಲರ ಕ್ರಮ ಪ್ರತಿಧ್ವನಿಸುವಂತೆ ಮಾಡುವ ಲೆಕ್ಕಾಚಾರವಿತ್ತು. ಆದರೆ ಸುಪ್ರೀಂಕೋರ್ಟ್‌ ಮೊರೆ ಹೋದರೆ ಪ್ರಕರಣ ಹೈಕೋರ್ಟ್‌ಗೆ ವರ್ಗಾವಣೆಯಾಗಬಹುದು ಎಂದು ಹಿರಿಯ ವಕೀಲರು ಸಲಹೆ ನೀಡಿದ್ದಾರೆ. ಹೀಗಾಗಿ ಹೈಕೋರ್ಟ್‌ ನಲ್ಲೇ ಅರ್ಜಿ ಸಲ್ಲಿಸಿದ್ದಾರೆ.* ಬೆಂಗಳೂರಿಗೆ ಆಗಮಿಸಲಿರುವ ಅಭಿಷೇಕ್ ಮನು ಸಿಂಘ್ವಿ ಮತ್ತು ಕಪಿಲ್ ಸಿಬಲ್, ಸಿದ್ದರಾಮಯ್ಯ ಜೊತೆ ಸುದೀರ್ಘ ಚರ್ಚೆ ನಡೆಸಲಿದ್ದಾರೆ. ಹೀಗಾಗಿ ಮಂತ್ರಾಲಯ ಪ್ರವಾಸವನ್ನು ಸಿಎಂ ರದ್ದು ಮಾಡಿದ್ದಾರೆ.* ರಾಜ್ಯಪಾಲರ ನಡೆಯನ್ನು ಖಂಡಿಸಿ ಕಾಂಗ್ರೆಸ್ ರಾಜ್ಯದಾದ್ಯಂತ ಸೋಮವಾರ (ಆ. 19) ಪ್ರತಿಭಟನೆ ಹಮ್ಮಿಕೊಂಡಿದೆ. ಜಿಲ್ಲಾ ಕೇಂದ್ರಗಳಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು  ಪ್ರತಿಭಟನೆ ನಡೆಸಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.* ಮುಖ್ಯಮಂತ್ರಿ ಸಿದ್ದರಾಮಯ್ಯ ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿ ಶಾಸಕರು ಮತ್ತು ವಿಧಾನಪರಿಷತ್ ಸದಸ್ಯರು ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಧರಣಿ ಹಮ್ಮಿಕೊಂಡಿದ್ದಾರೆ.