ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಶೀಘ್ರವೇ 18 ಸಾವಿರ ಶಾಲಾ ಶಿಕ್ಷಕರನ್ನು ನೇಮಕ ಅಧಿಸೂಚನೆ ಪ್ರಕಟಿಸಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಒಳ ಮೀಸಲಾತಿ ಪ್ರಕರಣವು ಇತ್ಯರ್ಥವಾಗಿರುವ ಕಾರಣ ಶೀಘ್ರವೇ ಅಧಿಸೂಚನೆ ಪ್ರಕಟಿಸಲು ಇಲಾಖೆ ಸಿದ್ಧತೆ ಮಾಡಿಕೊಳ್ಳುತ್ತಿದೆ ಎಂದರು.
ಸಮಗ್ರ ಶಿಕ್ಷಣ ಕರ್ನಾಟಕ ರಾಜ್ಯ ಯೋಜನಾ ನಿರ್ದೇಶಕರ ಕಚೇರಿಯಲ್ಲಿ ಮಾತನಾಡಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಅವರು ರಾಜ್ಯದ ಇತರೆ ಜಿಲ್ಲೆಗಳಲ್ಲಿ 13 ಸಾವಿರ ಮತ್ತು ಕಲ್ಯಾಣ ಕರ್ನಾಟಕ ಭಾಗದಲ್ಲಿ 5 ಸಾವಿರ ಸರ್ಕಾರಿ ಶಾಲಾ ಶಿಕ್ಷಕರನ್ನು ನೇಮಕ ಮಾಡಲಾಗುತ್ತದೆ. ಇದರ ಜತೆಗೆ ಅನುದಾನಿತ ಶಾಲೆಗಳ ಶಿಕ್ಷಕರನ್ನು ಕೂಡ ಭರ್ತಿ ಮಾಡಲಾಗುತ್ತದೆ ಎಂದು ಹೇಳಿದರು.
2022ರ ಶಿಕ್ಷರ ನೇಮಕ ಅಧಿಸೂಚನೆ ಪ್ರಕರಣವು ನ್ಯಾಯಾಲಯದಲ್ಲಿದೆ. ಕರ್ನಾಟಕ ಆಡಳಿತ ನ್ಯಾಯಾಧೀಕರಣ (ಕೆಎಟಿ)ದಲ್ಲಿಯೇ ಪ್ರಕರಣವನ್ನು ಇತ್ಯರ್ಥ ಮಾಡಿಕೊಳ್ಳುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. 15 ಸಾವಿರ ಹುದ್ದೆ ನೇಮಕಕ್ಕೆ ಅಧಿಸೂಚನೆ ಹೊರಡಿಸಲಾಗಿತ್ತು. ಇದರಲ್ಲಿ 13,352 ಮಂದಿ ಅರ್ಹರಾಗಿದ್ದರು. ನ್ಯಾಯಾಲಯದಲ್ಲಿ ಪ್ರಕರಣವಿರುವ ಕಾರಣ 481 ಅರ್ಹರಿಗೆ ಆದೇಶ ಪ್ರತಿ ನೀಡಿಲ್ಲ. ಆದರೆ, ಹೊಸ ಅಧಿಸೂಚನೆಗೂ ಮತ್ತು ಹಿಂದಿನ ಅಧಿಸೂಚನೆಗೂ ಸಂಬಂಧವಿಲ್ಲ. ನಿಯಮಗಳನ್ನು ಸರಿಪಡಿಸಿ ಹೊಸ ಅಧಿಸೂಚನೆ ಪ್ರಕಟಿಸಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.






Comments